ರಾಜ್ಯಕ್ಕೆ ಆಗಮಿಸಿರುವ ವಿದೇಶಿ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಅವರು ಪೊಲೀಸ್ ಮ್ಯಾರಾಥಾನ್ ಗೆ ಚಾಲನೆ ನೀಡಿದರು.
ಬಳಿಕ ಅವರು, ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಪ್ರವಾಸಿಗರ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ, ಈಗಾಗಲೇ ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳುಹಿಸದಂತೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದು, ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ಹಾಗೂ ಸಹಾಯ ನೀಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿರುವ ಅನಧಿಕೃತ ಹೋಂ ಸ್ಟ್ರೇಗಳ ಬಗ್ಗೆಯೂ ಪರಿಶೀಲನೆ ನಡೆಸಲು ಆಯಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇದಕ್ಕೂ ಮುನ್ನ ಕರ್ನಾಟಕ ಪೊಲೀಸ್ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಜಂಟಿ ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದಡಿ ಕರ್ನಾಟಕ ರಾಜ್ಯ ಪೊಲೀಸ್ ರನ್ ಕಾರ್ಯಕ್ರಮ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಭಾರತೀಯ ಸ್ಟೇಟ್ ಬ್ಯಾಂಕ್ ಬೆಂಗಳೂರು ಶಾಖೆಯ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಪೊಲೀಸ್ ಸಿಬ್ಬಂದಿ, ಸೈನಿಕರು, ಕ್ರೀಡಾಪಟುಗಳು ಸೇರಿದಂತೆ ಹಲವು ಮಂದಿ ಓಟದಲ್ಲಿ ಭಾಗಿಯಾಗಿದ್ದರು.
#LiveDDChandanaNews #DDChandanaNews #DDChandana #DDKannada